ತುಮಕೂರು: ಶಿರಾ ವಿಧಾನಸಭಾ ಉಪ ಚುನಾವಣೆಯ ಬಹಿರಂಗ ಪ್ರಚಾರವು ನವೆಂಬರ್ 1 ರ ಸಂಜೆ 6 ಗಂಟೆಗೆ ಅಂತ್ಯಗೊಳ್ಳಲಿದ್ದು, ಚುನಾವಣಾ ಬಹಿರಂಗ ಪ್ರಚಾರವನ್ನು ನಿಯಂತ್ರಿಸಲು ಹಾಗೂ ಚುನಾವಣೆಯನ್ನು ಮುಕ್ತ, ನಿಷ್ಪಕ್ಷಪಾತವಾಗಿ ನಡೆಸಲು ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ನವೆಂಬರ್ 1 ಸಂಜೆ 6 ಗಂಟೆಯಿಂದ ನವೆಂಬರ್ 3ರ ಮಧ್ಯರಾತ್ರಿ 12 ಗಂಟೆಯವರೆಗೆ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನಾದ್ಯಂತ ಕಲಂ 144ರಡಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಆದೇಶಿಸಿದ್ದಾರೆ.
ಈ ಆದೇಶವು ನವೆಂಬರ್ 3ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಡೆಯಲಿರುವ ಮತದಾನ ಕೇಂದ್ರಗಳ ಸ್ಥಳಕ್ಕೆ ಅನ್ವಯಿಸುವುದಿಲ್ಲ ಎಂದು ತಿಳಿಸಿದ್ದಾರೆ. ನಿಷೇಧಾಜ್ಞೆಯ ಅವಧಿಯಲ್ಲಿ ಐದು ಜನರ ಮೇಲ್ಪಟ್ಟು ಗುಂಪುಗಾರಿಕೆ ಮಾಡುವುದಾಗಲಿ, ಇತರೆ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುವಂತಿಲ್ಲ. ಈ ಅವಧಿಯಲ್ಲಿ ಯಾವುದೇ ಸ್ಪೋಟಕ ವಸ್ತುಗಳು ಮತ್ತು ಮಾರಕಾಸ್ತ್ರಗಳನ್ನು ಕೊಂಡೊಯ್ಯುವುದಾಗಲಿ ಅಥವಾ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಓಡಾಡುವಂತಿಲ್ಲ. ಯಾವುದೇ ಬಹಿರಂಗ ಪ್ರಚಾರ ಸಭೆ, ಸಮಾರಂಭ ಮತ್ತು ಮೆರವಣಿಗೆ ಮಾಡಬಾರದು. ಯಾವುದೇ ರೀತಿಯ ಮತೀಯ ಭಾವನೆಗಳನ್ನು ಕೆರಳಿಸುವಂತಹ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವುದು, ಘೋಷಣೆ ಕೂಗುವುದು ಹಾಗೂ ಭಿತ್ತಿ ಪತ್ರಗಳನ್ನು ಪ್ರಕಟಿಸುವಂತಿಲ್ಲ. ಶಾಂತಿ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಭಂಗವುಂಟು ಮಾಡುವ ಸುಳ್ಳು ವದಂತಿಗಳನ್ನು ಹಬ್ಬಿಸಬಾರದು. ಸಾರ್ವಜನಿಕರ ಪ್ರಾಣ ಮತ್ತು ಸಾರ್ವಜನಿಕರ ಆಸ್ತಿ-ಪಾಸ್ತಿಗಳಿಗೆ ಹಾನಿ ಉಂಟಾಗುವ ರೀತಿಯಲ್ಲಿ ವರ್ತಿಸಬಾರದು. ನಿಷೇಧಾಜ್ಞೆ ಅವಧಿಯಲ್ಲಿ ಶವಸಂಸ್ಕಾರ, ಮದುವೆ ಮತ್ತು ಧಾರ್ಮಿಕ ಕಾರ್ಯ ಹೊರತುಪಡಿಸಿ ಯಾವುದೇ ಸಭೆ ಸಮಾರಂಭ ಮತ್ತು ಮೆರವಣಿಗೆ ಮಾಡುವಂತಿಲ್ಲ. ಚುನಾವಣಾ ಆಯೋಗದ ಸ್ಪಷ್ಟೀಕರಣದಂತೆ ಮತದಾನದ ಹಿಂದಿನ 48 ಗಂಟೆಯ ಅವಧಿಯಲ್ಲಿ ಅಭ್ಯರ್ಥಿಯು ಮನೆಮನೆ ಭೇಟಿ ನೀಡಿ ಚುನಾವಣಾ ಪ್ರಚಾರ ಮಾಡುವುದಕ್ಕೆ ವಿನಾಯಿತಿ ನೀಡಲಾಗಿದೆ.